ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಎದುರಾಗಿದ್ದು, 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸಂಪುಟ ಉಪ ಸಮಿತಿ ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಿದೆ. ಶೀಘ್ರದಲ್ಲೇ ಅಧಿಕೃತವಾಗಿ ಬರ ಪೀಡಿತ ತಾಲೂಕುಗಳ ಘೋಷಣೆ ಮಾಡಲಾಗುವುದು.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಸಲಾಗಿದೆ. ಈ ಕುರಿತಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ನಂತರ ಕೇಂದ್ರದಿಂದ ಬೆಳೆ ನಷ್ಟ ಪರಿಹಾರ ಪಡೆದುಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು.
40 ತಾಲೂಕುಗಳಲ್ಲಿ ಭಾಗಶಃ ಬರ ಸ್ಥಿತಿ ಇದ್ದು, ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆ ನಡೆಸಿ ಕೇಂದ್ರ ಮಾರ್ಗಸೂಚಿ ಅನ್ವಯ ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿ ಪರಿಹಾರಕ್ಕೆ ಹೆಚ್ಚುವರಿ ಪ್ರಸ್ತಾವನೆ ಸಲ್ಲಿಸಲಾಗುವುದು.
ಒಂದು ವಾರದಿಂದ ರಾಜ್ಯಾದ್ಯಂತ ಬೆಳೆ ಸಮೀಕ್ಷೆ ಪರಿಶೀಲನೆ ನಡೆಸಲಾಗಿದ್ದು, ಕೇಂದ್ರ ಮಾರ್ಗಸೂಚಿ ಅನ್ವಯ 161 ತಾಲೂಕುಗಳು ಬರ ಘೋಷಣೆಗೆ ಅರ್ಹವಾಗಿವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. 34 ತಾಲೂಕುಗಳಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದ್ದು, 40 ತಾಲೂಕುಗಳಲ್ಲಿ ಭಾಗಶಃ ಬರದ ಪರಿಸ್ಥಿತಿ ಇದೆ. ಇವುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲು ಕೇಂದ್ರದ ಮಾರ್ಗಸೂಚಿ ಅಡ್ಡಿಯಾಗಿರುವುದರಿಂದ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆಗೆ ಸೂಚನೆ ನೀಡಿ ಅದರ ಆಧಾರದ ಮೇಲೆ ಮತ್ತೊಂದು ಪಟ್ಟಿ ಸಿದ್ದಪಡಿಸಲಾಗುವುದು ಎಂದು ಹೇಳಿದ್ದಾರೆ.