ಬೆಂಗಳೂರು: ಬೆಂಗಳೂರಿನಲ್ಲಿ ಸರಣಿ ರಸ್ತೆ ಅಪಘಾತದ ಬಳಿಕ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ನಿನ್ನೆಯಿಂದ ನಗರದಲ್ಲಿ ರಾತ್ರಿ ವೇಳೆ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಕೈಗೊಳ್ಳಲಾಗಿದೆ.
ಕೊರೋನಾ ಹಿನ್ನೆಲೆಯಲ್ಲಿ ಸುಮಾರು ಒಂದೂವರೆ ವರ್ಷದಿಂದ ಡ್ರಂಕ್ ಡ್ರೈವ್ ತಪಾಸಣೆಯನ್ನು ನಿಲ್ಲಿಸಲಾಗಿತ್ತು. ನಿನ್ನೆಯಿಂದ 44 ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಡ್ರಂಕ್ ಆಂಡ್ ಡ್ರೈವ್ ತಪಾಸಣೆ ಕೈಗೊಳ್ಳಲಾಗಿದ್ದು, 44 ವಾಹನ ಚಾಲಕರು ಮದ್ಯ ಸೇವಿಸಿ ವಾಹನ ಚಾಲನೆ ಮಾಡಿರುವುದು ಗೊತ್ತಾಗಿದೆ. 1408 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಮತ್ತು ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಕೆಲವರ ಡಿಎಲ್ ಅಮಾನತು ಮಾಡುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಶಿಫಾರಸು ಮಾಡಲಾಗಿದೆ ಎನ್ನಲಾಗಿದೆ.