ಬೆಂಗಳೂರು: ರಾಜ್ಯದ ಗ್ರಾಮೀಣ, ನಗರ ಪ್ರದೇಶದಲ್ಲಿ ನೀರಿನ ಸಮಸ್ಯೆ ನಿವಾರಣೆಗೆ ಟ್ಯಾಂಕರ್ ಮತ್ತು ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಸಮಸ್ಯೆ ಹೆಚ್ಚಾಗಲಿದ್ದು, ನೀರು ಪೂರೈಕೆಗಾಗಿ 7 ಸಾವಿರಕ್ಕೂ ಅಧಿಕ ಖಾಸಗಿ ಬೋರ್ವೆಲ್ ಗಳನ್ನು ಗುತ್ತಿಗೆ ಪಡೆಯಲು ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಸರ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬರಗಾಲದ ಪರಿಸ್ಥಿತಿಯಿಂದ ಮಾರ್ಚ್ ನಿಂದ ಮೇ ವರೆಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಲಿದೆ. ಈಗಾಗಲೇ ಟ್ಯಾಂಕರ್ ಮತ್ತು ಬೋರ್ವೆಲ್ ಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಖಾಸಗಿ ಬೋರ್ವೆಲ್ ಗಳು ಇಲ್ಲದ ಕಡೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಅಂದಾಜಿದ್ದು, 7 ಸಾವಿರ ಖಾಸಗಿ ಬೋರ್ ವೆಲ್ ಗುರುತಿಸಿ ಅವುಗಳ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.