ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ನಗರ ಸಂಚಾರ ಪೊಲೀಸರು 779 ಪ್ರಕರಣ ದಾಖಲಿಸಿದ್ದಾರೆ. ಸಂಚಾರ ಪೊಲೀಸರು, ಅಧಿಕಾರಿಗಳು ಮತ್ತು 860 ಸಿಬ್ಬಂದಿ ಸೇರಿ ಒಟ್ಟು 1185 ಮಂದಿ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. 34,676 ವಿವಿಧ ಮಾದರಿ ವಾಹನಗಳ ತಪಾಸಣೆ ನಡೆಸಲಾಗಿದ್ದು, ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುತ್ತಿದ್ದ 779 ಮಂದಿ ಸಿಕ್ಕಿ ಬಿದ್ದಿದ್ದಾರೆ. ಅವರ ವಿರುದ್ಧ ಮೋಟಾರ್ ವಾಹನ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರಸ್ತೆ ಸುರಕ್ಷತೆಗೆ ಒತ್ತು, ಮದ್ಯಪಾನ ಮಾಡಿ ವಾಹನ ಚಾಲನೆಗೆ ತಡೆ ಉದ್ದೇಶದಿಂದ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೋಲಿಸ್ ಆಯುಕ್ತರಾದ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.