ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಗಟ್ಟಲು ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ವಿದ್ಯಾರ್ಥಿಗಳಿಗೆ ಹೊರಗಿನಿಂದ ಉತ್ತರ ರವಾನಿಸುವವರಿಗೆ ಕಡಿವಾಣ ಹಾಕಲು ಪರೀಕ್ಷಾ ಕೇಂದ್ರಗಳ ಮೇಲೆ ಡ್ರೋನ್ ಕ್ಯಾಮೆರಾ ಹಾರಟ ನಡೆಸಲು ಚಿಂತಿಸಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆಗಳಲ್ಲಿ ಅಕ್ರಮ ತಡೆಗಟ್ಟುವ ಉದ್ದೇಶದಿಂದ ಇತ್ತೀಚೆಗೆ ನಡೆದ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಭೆಯಲ್ಲಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದ್ದು, ಹೆಚ್ಚು ಫಲಿತಾಂಶ ಪಡೆಯುವಂತೆ ಶಿಕ್ಷಕರ ಮೇಲೆ ಒತ್ತಡ ಹೇರದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಅಲ್ಲದೆ ಜಾಗೃತ ದಳದ ಅಧಿಕಾರಿಗಳನ್ನು ನೇಮಿಸುವ ಸಂದರ್ಭದಲ್ಲಿ ಗ್ರಾಮ ಲೆಕ್ಕಿಗರು, ಪಿಡಿಓ ಸೇರಿದಂತೆ ಇತರೆ ಅಧಿಕಾರಿಗಳನ್ನು ನೇಮಿಸಿಕೊಳ್ಳಬೇಕು, ಪ್ರಶ್ನೆಪತ್ರಿಕೆಗಳ ಬಂಡಲ್ ತೆರೆಯುವ ಹಾಗೂ ಕೊನೆಯಲ್ಲಿ ಸೀಲ್ ಮಾಡುವಾಗ ವೆಬ್ ಕ್ಯಾಸ್ಟಿಂಗ್ ಮಾಡಬೇಕು ಎಂಬುದು ಸೇರಿದಂತೆ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.