ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಗಾಂಜಾ ಪೆಡ್ಲರ್, ಡ್ರಗ್ಸ್ ಅಡ್ಡೆ, ಗೋದಾಮಿನ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಪೊಲೀಸ್ ಇಲಾಖೆಯಿಂದ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗಿದೆ.
“ನಶೆ ಮುಕ್ತ ಕರ್ನಾಟಕ” ಪೊಲೀಸ್ ಇಲಾಖೆ ಅಪ್ಲಿಕೇಶನ್ ಮೂಲಕ ಮಾಹಿತಿ ಹಂಚಿಕೊಳ್ಳಲು ಪೊಲೀಸರು ಮನವಿ ಮಾಡಿದ್ದಾರೆ. ಈ ಮೂಲಕ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ರಾಜ್ಯ ಪೊಲೀಸ್ ಇಲಾಖೆ ಮುಂದಾಗಿದೆ. ಗೂಗಲ್ ಪ್ಲೇ ಸ್ಟೋರ್ ಮೂಲಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಆ್ಯಪ್ ಮೂಲಕ ಯಾರು ಎಲ್ಲಿಂದ ಬೇಕಾದರೂ ಮಾಹಿತಿ ನೀಡಬಹುದು.
ಕನ್ನಡ, ಆಂಗ್ಲ ಭಾಷೆಯಲ್ಲಿ ಮಾಹಿತಿ ನೀಡಲು ಅನುಕೂಲವಾಗುವಂತೆ ಆ್ಯಪ್ ಸಿದ್ಧಪಡಿಸಲಾಗಿದೆ. ಅಪ್ಲಿಕೇಶನ್ ನಲ್ಲಿ ನೀಡಿದ ಮಾಹಿತಿ ಸಂಬಂಧಿಸಿದ ಪೊಲೀಸ್ ಅಧಿಕಾರಿಗೆ ರವಾನೆ ಮಾಡಲಾಗುವುದು. ಮಾಹಿತಿ ಖಚಿತತೆ ಆಧರಿಸಿ ದಾಳಿ ನಡೆಸಲು ಸಂಬಂಧಿಸಿದ ಅಧಿಕಾರಿಗೆ ಕರ್ನಾಟಕ ಪೊಲೀಸ್ ಇಲಾಖೆಯಿಂದ ಅನುಮತಿ ನೀಡಲಾಗುವುದು ಎಂದು ಹೇಳಲಾಗಿದೆ.