ಕೊಡಗು: ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ನದಿ, ಹಳ್ಳ-ಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಮುಂಜಾಗೃತಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿಷೇಧ ಹೇರಲಾಗಿದೆ.
ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ದುಬಾರೆ ಪ್ರದೇಶಕ್ಕೆ ನಿಷೇಧ ಹೇರಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಕಾವೇರಿ ನದಿ ತುಂಬಿ ಹರಿಯುತ್ತಿದೆ. ಭಾಗಮಂಡಲ ಸಂಪೂರ್ಣ ಜಲಾವೃತವಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಕೊಡಗಿನಾದ್ಯಂತ ವರುಣಾರ್ಭಟ ಜೋರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದುಬಾರೆ ತಾಣಕ್ಕೆ ಪ್ರವೇಶ ನಿಷೇಧಿಸಲಾಗಿದೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ತಾಣಕ್ಕೆ ದುಬಾರೆಯ ಎಲಿಫಂಟ್ ಕ್ಯಾಂಪ್, ರಿವರ್ ರಾಪ್ಟಿಂಗ್ ಗಾಗಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದರೆ ಕೊಡಗಿನಲ್ಲಿ ಮಳೆ ಆರ್ಭಟ ಹೆಚ್ಚಾಗಿದ್ದು, ಕಾವೇರಿ ನದಿಯಲ್ಲಿಯೂ ನೀರಿನ ಮಟ್ಟ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ದುಬಾರೆ ತಾಣಕ್ಕೆ ತಾತ್ಕಾಲಿಕ ನಿಷೇಧ ಹೇರಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ