ಶಿವಮೊಗ್ಗ: ಸೆಪ್ಟೆಂಬರ್ 5 ರಿಂದ ಶಾಲೆಗಳಲ್ಲಿ ಇ- ಲೈಬ್ರೆರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರ ತಂದು ಅವರಲ್ಲಿ ಓದುವ ಹವ್ಯಾಸ ಬೆಳೆಸಲು ಯೋಜಿಸಲಾಗಿದೆ. ಹೀಗಾಗಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಗ್ರಂಥಾಲಯ ಅಭಿವೃದ್ಧಿ ಪಡಿಸುತ್ತಿದ್ದು, ಇದರೊಂದಿಗೆ ಇ-ಲೈಬ್ರೆರಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಇ -ಲೈಬ್ರೆರಿಯಲ್ಲಿ 40 ಲಕ್ಷಕ್ಕೂ ಅಧಿಕ ಪ್ರಕಾರದ ಪುಸ್ತಕಗಳು ದೊರೆಯುತ್ತವೆ. ಇದರ ಸದಸ್ಯತ್ವ ಉಚಿತವಾಗಿರುತ್ತದೆ. ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಯಂದು ಇ- ಲೈಬ್ರೆರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ನಗರ ಪ್ರದೇಶದ ಮಕ್ಕಳಿಗೆ ದೊರೆಯುತ್ತಿರುವ ಶೈಕ್ಷಣಿಕ ಸೌಲಭ್ಯ ಗ್ರಾಮೀಣ ಭಾಗದ ಮಕ್ಕಳಿಗೂ ಸಿಗುವಂತಾಗಬೇಕು. ಹೀಗಾಗಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಎಲ್.ಕೆ.ಜಿ., ಯುಕೆಜಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.