ಬೆಂಗಳೂರು: ಖಾತಾ ಹಂಚಿಕೆಯಲ್ಲಿನ ಸಮಸ್ಯೆ ಪರಿಹಾರಕ್ಕೆ ಕಾರ್ಯಪಡೆ ರಚನೆ ಮಾಡಲಾಗುವುದು. ವಿಕಾಸಸೌಧದಲ್ಲಿ ನಡೆದ ಸಚಿವತ್ರಯರ ಸಭೆಯಲ್ಲಿ ಕಾರ್ಯಪಡೆ ರಚನೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ, ನಗರ ಮತ್ತು ಗ್ರಾಮಾಂತರ ಇಲಾಖೆಯ ಅಧಿಕಾರಿಗಳುಗಳನ್ನು ಒಳಗೊಂಡ ಜಂಟಿ ಕಾರ್ಯಪಡೆ ರಚನೆ ಮಾಡಲಾಗುವುದು.
ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪೌರಾಡಳಿತ ಸಚಿವ ರಹೀಮ್ ಖಾನ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಇ- ಸ್ವತ್ತು, ಇ-ಆಸ್ತಿ, ಇ-ವಿನ್ಯಾಸ ವಿತರಿಸಲು ಅನುಕೂಲವಾಗುವಂತೆ ಮೂರು ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಕಾರ್ಯಪಡೆ ರಚನೆ ಮಾಡಲಾಗುವುದು.
ಎಸಿಎಸ್ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಜಂಟಿ ಕಾರ್ಯಪಡೆ ರಚನೆಯಾಗಲಿದೆ. ಖಾತಾರಹಿತ ಆಸ್ತಿ ನೋಂದಣಿ ಸ್ಥಗಿತದಿಂದ ಆಗಿರುವ ಸಮಸ್ಯೆ ಇತ್ಯರ್ಥಪಡಿಸಲಾಗುವುದು. ಖಾತಾ ವಿತರಿಸುವ ಸಂಬಂಧ ತಕ್ಷಣದ ಪರಿಹಾರೋಪಾಯ ಸೂಚಿಸಲು ಗಡುವು ನೀಡಲಾಗಿದೆ.
ಎರಡು ತಿಂಗಳ ಒಳಗೆ ಅಂತಿಮ ವರದಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದೆ. ಜಂಟಿ ಕಾರ್ಯಪಡೆ ಅಧ್ಯಕ್ಷರು ಮತ್ತು ಸಮಿತಿ ಸದಸ್ಯರಿಗೆ ಸೂಚನೆ ನೀಡಲಾಗಿದೆ.
ಜಂಟಿ ಕಾರ್ಯಪಡೆಯ ಅಧ್ಯಕ್ಷರು, ಅಭಿವೃದ್ಧಿ ಆಯುಕ್ತರಾದ ಉಮ ಮಹಾದೇವನ್ ಗೆ ಸೂಚನೆ ನೀಡಿದ್ದು, ಚಿಕ್ಕಮಗಳೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಮಸ್ಯೆಯಾಗಿದೆ. ಮಲೆನಾಡು ಭಾಗದಲ್ಲಿ ಖಾತಾ ವಿತರಿಸಲು ಎದುರಾಗಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತಿಳಿಸಲಾಗಿದೆ.
ಗ್ರಾಮ ಠಾಣಾ ವ್ಯಾಪ್ತಿ ವಿಸ್ತರಣೆ ಮತ್ತಿತರ ಸಮಸ್ಯೆಗೆ ಪರಿಹಾರ ಒದಗಿಸಿ ಖಾತಾ ವಿತರಿಸಲು ಮತ್ತು ಭವಿಷ್ಯದಲ್ಲಿ ಎದುರಾಗುವ ಸಮಸ್ಯೆ, ಈಗಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತಿಳಿಸಲಾಗಿದೆ. ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.