ವಿಜಯಪುರ : ಸುರಿಯುತ್ತಿರುವ ಮಳೆ ನಡುವೆಯೇ ವಿಜಯಪುರದಲ್ಲಿ ಜನರಿಗೆ ಭೂಕಂಪನದ ಅನುಭವವಾಗಿದೆ.
ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಇಂದು ಬೆಳಗ್ಗೆ 9:55 ಕ್ಕೆ 2.4 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ.
ಭೂಮಿಯ 15 ರಿಂದ 20 ಕಿಮೀ ಆಳದಲ್ಲಿ ಕಂಪನವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಸುರಿಯುತ್ತಿರುವ ಮಳೆ ನಡುವೆಯೇ ಭೂಮಿ ಕಂಪಿಸಿದ್ದು, ಜನರು ಮನೆಯಿಂದ ಹೊರಗಡೆ ಬಂದಿದ್ದಾರೆ. ಇದರಿಂದ ಕೆಲಕಾಲ ಕ್ಷಣದ ಆತಂಕ ವಾತಾವರಣ ನಿರ್ಮಾಣವಾಗಿತ್ತು.
ರಾಜ್ಯದಲ್ಲಿ ಮಳೆರಾಯನ ಆರ್ಭಟ
ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಹಾವೇರಿಯಲ್ಲಿ ಮನೆ ಕುಸಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಮತ್ತೊಂದು ದುರಂತ ಸಂಭವಿಸಿದ್ದು, ನಿರಂತರ ಮಳೆಯಿಂದಾಗಿ ಮನೆ ಕುಸಿದು ಬಿದ್ದು, ಒಂದು ವರ್ಷದ ಕಂದಮ್ಮ ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ.
ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಕೆಲ ದಿನಗಳಿಂದ ಸುರಿಯುತ್ತಿದ್ದ ಭಾರಿ ಮಳೆಯಿಂದಾಗಿ ಮನೆ ಸಂಪೂರ್ಣ ಹಾನಿಯಾಗಿತ್ತು. ಇದೀಗ ಮನೆ ಏಕಾಏಕಿ ಕುಸಿದು ಬಿದ್ದಿದ್ದು, ದುರಂತದಲ್ಲಿ ಒಂದು ವರ್ಷದ ಮಗು ಸ್ಫೂರ್ತಿ ಸಾವನ್ನಪ್ಪಿದ್ದಾಳೆ. ಸ್ಫೂರ್ತಿಯ ತಂದೆ ಕೆಂಚಪ್ಪಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಮಲೇಬೆನ್ನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.