ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ ಪತ್ತೆಯಾದ ಡೆಂಘೀ ಪ್ರಕರಣಗಳ ಪೈಕಿ ಶೇಕಡ 25 ರಷ್ಟು 6ರಿಂದ 16 ವರ್ಷದೊಳಗಿನ ಮಕ್ಕಳಲ್ಲಿ ಕಂಡುಬಂದಿವೆ. ಈ ಹಿನ್ನಲೆಯಲ್ಲಿ ಶಾಲೆಗಳಲ್ಲಿ ಡೆಂಘೀ ತಡೆಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ವಿದ್ಯಾರ್ಥಿಗಳು, ಬೋಧಕರು, ಬೋಧಕೇತರ ವರ್ಗದವರು 10 ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಬೇಕು ಎಂದು ತಿಳಿಸಲಾಗಿದೆ. ಶಾಲೆಗಳ ಸುತ್ತಮುತ್ತ ಪ್ರದೇಶಗಳಲ್ಲಿ ಡೆಂಘೀ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಕೈಕಾಲು ಮುಚ್ಚುವಂತಹ ಸಮವಸ್ತ್ರ, ಬಟ್ಟೆ ಧರಿಸಿಕೊಂಡು ಸೊಳ್ಳೆ ನಿವಾರಕ ಹಚ್ಚಿಕೊಂಡು ಬರಬೇಕು. ಡೆಂಘೀ ನಿಯಂತ್ರಣ ಕ್ರಮಗಳ ಬಗ್ಗೆ ಶಾಲೆಯ ಸೂಚನಾ ಫಲಕದಲ್ಲಿ ಮಾಹಿತಿ ಪ್ರಕಟಿಸಬೇಕು. ಅದನ್ನು ಅನುಸರಿಸಲು ಜಾಗೃತಿ ಮೂಡಿಸಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.