ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅತಿಥಿ ಶಿಕ್ಷಕನಾಗಿದ್ದ ರೌಡಿಶೀಟರ್ ಭಾಗಪ್ಪ ನನ್ನು ಶಾಲಾ ಕರ್ತವ್ಯದಿಂದ ವಜಾಗೊಳಿಸಲಾಗಿದೆ.
ರೌಡಿಶೀಟರ್ ಭಾಗಪ್ಪ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ರೇಣುಕಾ ಪಾಟೀಲ್ ಹೇಳಿದ್ದಾರೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2019 ರಿಂದ ರೌಡಿಶೀಟರ್ ಅತಿಥಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಕಲಬುರಗಿ ಮೂಲದ ಸ್ಥಳೀಯ ಪತ್ರಿಕೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದ. 2016ರಲ್ಲಿ ಗ್ರಾಮದಲ್ಲಿ ನಡೆದ ಸಮುದಾಯಗಳ ನಡುವಿನ ಜಗಳದಲ್ಲಿ ಶಹಾಪುರ ಠಾಣೆಯಲ್ಲಿ ಈತನ ವಿರುದ್ಧ ರೌಡಿಶೀಟ್ ದಾಖಲಾಗಿದೆ. ಇಂದಿಗೂ ಆತ ರೌಡಿಶೀಟರ್ ಪಟ್ಟಿಯಲ್ಲಿದ್ದಾನೆ.
ಶಿಕ್ಷಕರ ಕೊರತೆ ಕಾರಣಕ್ಕೆ ಸ್ಥಳೀಯವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಅತಿಥಿ ಶಿಕ್ಷಕರ ನಡತೆ ಪ್ರಮಾಣ ಪತ್ರ, ಕ್ರಿಮಿನಲ್ ಪ್ರಕರಣ ದಾಖಲಾಗಿದ್ದರೆ ವರದಿ ನೀಡುವಂತೆ ಸಂಬಂಧಿಸಿದ ಠಾಣೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಲಾಗಿದೆ.