
ಬೆಂಗಳೂರು: ಶಿಕ್ಷಕರ ನೇಮಕಾತಿ ಕೌನ್ಸೆಲಿಂಗ್ ನವೆಂಬರ್ 4 ರಿಂದ ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇದ್ದ ಕಾರಣಕ್ಕೆ ತಡೆಹಿಡಿಯಲಾಗಿದ್ದ ಹೈದರಾಬಾದ್ ಕರ್ನಾಟಕ ವಿಶೇಷ ಸ್ಥಾನಮಾನ- 371 ಜೆ ಗೆ ಸಂಬಂಧಿಸಿದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಮತ್ತು ಬಿಬಿಎಂಪಿ ವ್ಯಾಪ್ತಿಯ ಶೇಕಡ 8% ರಷ್ಟು ಹುದ್ದೆಗಳಿಗೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಮತ್ತು ಉತ್ತರ ಶೈಕ್ಷಣಿಕ ಜಿಲ್ಲೆಗಳಲ್ಲಿ ಆರರಿಂದ ಎಂಟನೇ ತರಗತಿಯ ಪದವೀಧರ ಶಿಕ್ಷಕರ ಹುದ್ದೆಗಳಿಗೆ ನವೆಂಬರ್ 4 ರಿಂದ ಕೌನ್ಸೆಲಿಂಗ್ ನಡೆಸಲಾಗುವುದು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈಗ ಬಗ್ಗೆ ಮಾಹಿತಿ ನೀಡಿದ್ದು, ನ್ಯಾಯಾಲಯದ ಆದೇಶದಿಂದ ಪ್ರಭಾವಿತವಾಗಬಹುದಾದ ಹುದ್ದೆಗಳನ್ನು ಕಾಯ್ದಿರಿಸಿ ಉಳಿದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ಮುಂದುವರಿಸಲಾಗುತ್ತದೆ ಎಂದು ತಿಳಿಸಿದೆ.
ಕಲಬುರಗಿ, ಬೀದರ್, ಕೊಪ್ಪಳ, ರಾಯಚೂರು, ಬಳ್ಳಾರಿ, ಯಾದಗಿರಿ, ವಿಜಯನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಕಳೆದ ಮಾರ್ಚ್ ನಲ್ಲಿ ಪ್ರಕಟಿಸಲಾದ 1:1 ಅನುಪಾತದ ಮುಖ್ಯ ಆಯ್ಕೆ ಪಟ್ಟಿಯಲ್ಲಿ ಕೌನ್ಸೆಲಿಂಗ್ ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ನವೆಂಬರ್ 2ರಂದು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಶಿಕ್ಷಣ ಇಲಾಖೆಯ https://school education.karnataka.gov.in ವೆಬ್ ಸೈಟ್ ಗಮನಿಸಬಹುದಾಗಿದೆ.