ಶಿವಮೊಗ್ಗ: ಸರ್ಕಾರಿ ಶಾಲೆಯ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಅಜೀಂ ಪ್ರೇಮ್ ಜೀ ಫೌಂಡೇಶನ್ ನೆರವಿನೊಂದಿಗೆ ವಾರದಲ್ಲಿ ಆರು ದಿನ ಮೊಟ್ಟೆ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ನೀಡಲಾಗುತ್ತಿದೆ. ಇದನ್ನು ಆರು ದಿನಕ್ಕೆ ಹೆಚ್ಚಿಸಲಾಗುವುದು. ಮಕ್ಕಳಿಗೆ ಆರು ದಿನ ಮೊಟ್ಟೆ ನೀಡುವುದರಿಂದ ವಾರ್ಷಿಕ 1400 ಕೋಟಿ ರೂ. ವೆಚ್ಚವಾಗಲಿದೆ ಎಂದು ಹೇಳಿದ್ದಾರೆ.
ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಳಕ್ಕೆ ಹಂತ ಹಂತವಾಗಿ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ ಆಧುನಿಕ ಸೌಲಭ್ಯಗಳೊಂದಿಗೆ 3000 ಕೆಪಿಎಸ್ ಶಾಲೆ ತೆರೆಯಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.