
ಬೆಂಗಳೂರು: ಬೆಳಗಾವಿ ಲೋಕಸಭೆ ಮತ್ತು ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ.
ಮಾರ್ಚ್ 23 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಮಾರ್ಚ್ 31 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 3 ರಂದು ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾಗಿದ್ದು, ಏಪ್ರಿಲ್ 17 ರಂದು ಮತದಾನ ನಡೆಯಲಿದೆ. ಮೇ 2 ರಂದು ಮತ ಎಣಿಕೆ ನಡೆಸಲಾಗುವುದು.
ಬೆಳಗಾವಿ ಲೋಕಸಭೆ ಸದಸ್ಯರಾಗಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ನಿಗದಿಯಾಗಿದೆ. ಅದೇ ರೀತಿ ಬಸವಕಲ್ಯಾಣ ಕ್ಷೇತ್ರದ ಶಾಸಕ ಕಾಂಗ್ರೆಸ್ ಪಕ್ಷದ ಬಿ. ನಾರಾಯಣರಾವ್ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
ಮಸ್ಕಿ ವಿಧಾನಸಭೆ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.
ಸಂಭಾವ್ಯ ಅಭ್ಯರ್ಥಿಗಳು:
ಬೆಳಗಾವಿಯಲ್ಲಿ ಬಿಜೆಪಿಯಿಂದ ಸುರೇಶ್ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್, ಡಾ. ರವಿ ಪಾಟೀಲ್, ಪ್ರಭಾಕರ ಕೋರೆ, ರಮೇಶ್ ಕತ್ತಿ ಅಭ್ಯರ್ಥಿಗಳಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷದಿಂದ ಸತೀಶ್ ಜಾರಕಿಹೊಳಿ, ಪ್ರಕಾಶ್ ಹುಕ್ಕೇರಿ ಕಣಕ್ಕಿಳಿಯಬಹುದು.
ಬಸವಕಲ್ಯಾಣದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖೂಬಾ, ಶರಣು ಸಲಗಾರ, ಪ್ರದೀಪ, ಬಿ.ವೈ. ವಿಜಯೇಂದ್ರ ಸ್ಪರ್ಧಿಸಬಹುದು. ಕಾಂಗ್ರೆಸ್ ಪಕ್ಷದಿಂದ ವಿಜಯಸಿಂಗ್, ಮಲ್ಲಮ್ಮ ನಾರಾಯಣರಾವ್ ಸಂಭಾವ್ಯ ಅಭ್ಯರ್ಥಿಗಳಾಗಿದ್ದಾರೆ.
ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರತಾಪ್ ಗೌಡ ಸ್ಪರ್ಧಿಸಲಿದ್ದು ಕಾಂಗ್ರೆಸ್ ಪಕ್ಷದಿಂದ ಬಸವನಗೌಡ ತುರವಿಹಾಳ ಸಂಭಾವ್ಯ ಅಭ್ಯರ್ಥಿಗಳಾಗಿದ್ದಾರೆ.