
ಬೆಂಗಳೂರು: ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತದಾನ ನಡೆಯಲಿದೆ.
ದೊಡ್ಡ ಬದಲಾವಣೆಗೆ ಕಾರಣವಾಗದಿದ್ದರೂ ಕಾಂಗ್ರೆಸ್ ಮತ್ತು ಬಿಜೆಪಿಗೆ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಮೇ 2 ರಂದು ಮತ ಎಣಿಕೆ ನಡೆಯಲಿದ್ದು ಯಾರಿಗೆ ಜಯ ಸಿಗಲಿಇದೆ ಎಂಬುದನ್ನು ಕಾದುನೋಡಬೇಕಿದೆ.
ರಾಜ್ಯದಲ್ಲಿ ಕೊರೋನಾನ ಎರಡನೇ ಆತಂಕದ ನಡುವೆ ಮತದಾನ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೊರೊನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ ನೀಡಲಾಗಿದೆ. ಬೆಳಗಾವಿಯಲ್ಲಿ ಮತಗಟ್ಟೆ ಅಧಿಕಾರಿಗಳು ಸೋಂಕಿತರು ಇರುವ ಸ್ಥಳಕ್ಕೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ ಮತ ಪಡೆಯಲಿದ್ದಾರೆ.
ಬಸವಕಲ್ಯಾಣದಲ್ಲಿ ಕೊನೆಯ ಒಂದು ಗಂಟೆ ಅವಧಿಯಲ್ಲಿ ಸೋಂಕಿತರು ಮತದಾನ ಮಾಡಲು ಅವಕಾಶ ನೀಡಲಾಗಿದ್ದು, ಮಸ್ಕಿಯಲ್ಲಿ ಪಿಪಿಇ ಕಿಟ್ ಧರಿಸಿ ಮತಗಟ್ಟೆಗೆ ಬಂದು ಮತದಾನ ಮಾಡಲು ಅವಕಾಶ ನೀಡಲಾಗಿದೆ. ಸುರಕ್ಷತೆ ಕ್ರಮಗಳೊಂದಿಗೆ ಮತದಾನಕ್ಕೆ ಸಕಲ ಸಿದ್ಧತೆ ಮಾಡಲಾಗಿದ್ದು, ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮತದಾನ ಮಾಡಲು ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.