ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಈ ಬಾರಿ ವಿನೂತನ ಪದ್ಧತಿ ಅನುಸರಿಸಲಾಗುತ್ತಿದೆ.
ಇಂದು 224 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, 22 ಸಾವಿರ ಸ್ಥಳಿಯ ಮುಖಂಡರು ಮತದಾನ ಮಾಡಲಿದ್ದಾರೆ. ಅಭ್ಯರ್ಥಿಗಳ ಆಯ್ಕೆಗೆ 4 ಹಂತಗಳ ಪ್ರಕ್ರಿಯೆ ನಡೆಯಲಿದೆ. ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸ್ಥಳೀಯ ಪದಾಧಿಕಾರಿಗಳು, ಮುಖಂಡರು ಮೂವರು ಅಭ್ಯರ್ಥಿಗಳಿಗೆ ಮತದಾನ ಮಾಡಲಿದ್ದಾರೆ.
ನಂತರ ಎರಡು ದಿನ ಬೆಂಗಳೂರಿನಲ್ಲಿ ಜಿಲ್ಲಾ ಕೋರ್ ಕಮಿಟಿ ಸದಸ್ಯರಿಂದ ರಾಜ್ಯ ನಾಯಕರಿಗೆ ಅಭಿಪ್ರಾಯ ಸಲ್ಲಿಸಲಾಗುತ್ತದೆ. ಬಳಿಕ ಕೋರ್ ಕಮಿಟಿ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ನಂತರ ದೆಹಲಿಯಲ್ಲಿ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಚರ್ಚೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ.
ಇಂದು ಬಿಜೆಪಿಯ 39 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಮುಖಂಡರು ಮತದಾನ ಮಾಡಲಿದ್ದಾರೆ. ಶಕ್ತಿ ಕೇಂದ್ರಗಳ ಪ್ರಮುಖರು, ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪ್ರಮುಖರು, ಜಿಲ್ಲಾ ಘಟಕಗಳಿಗೆ ನೇಮಕವಾದವರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮತ ಹಾಕಲಿದ್ದಾರೆ ಎಂದು ಹೇಳಲಾಗಿದೆ.