ಬೆಂಗಳೂರು: ಚನ್ನಪಟ್ಟಣ ಸೇರಿದಂತೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಸಿದ್ದತೆ, ಅಭ್ಯರ್ಥಿಗಳ ಆಯ್ಕೆ, ರಾಜ್ಯ ಬೆಳವಣಿಗೆಗಳ ಕುರಿತಾಗಿ ಸಮಾಲೋಚನೆ ನಡೆಸಲು ರಾಜ್ಯ ಬಿಜೆಪಿ ನಾಯಕರು ದೆಹಲಿಗೆ ದೌಡಾಯಿಸಿದ್ದಾರೆ.
ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ್, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಮಾಜಿ ಸಚಿವ ಸಿ.ಟಿ. ರವಿ ಸೇರಿದಂತೆ ರಾಜ್ಯ ಬಿಜೆಪಿ ಪ್ರಮುಖರು ವರಿಷ್ಠರ ಭೇಟಿಗಾಗಿ ದೆಹಲಿಗೆ ಆಗಮಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಉಪ ಚುನಾವಣೆಯ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ ಮತ್ತು ರಾಜ್ಯ ರಾಜಕೀಯದ ಬೆಳವಣಿಗೆಗಳು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟ, ಪಕ್ಷದ ಸದಸ್ಯತ್ವ ಅಭಿಯಾನ ಮೊದಲಾದ ವಿಚಾರಗಳ ಬಗ್ಗೆ ವರಿಷ್ಠ ನಾಯಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ರಾಜ್ಯ ಬಿಜೆಪಿ ನಾಯಕರು ದೆಹಲಿ ಭೇಟಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.