ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯಗೊಂಡಿದೆ. ಅ. 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ. 30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ಭಾರಿ ಹಣಾಹಣಿಯ ನಿರೀಕ್ಷೆ ಮೂಡಿಸಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ನಾಮಪತ್ರ ಸಲ್ಲಿಕೆಯ ಕೊನೆಯ ದಿನ ಮಾಜಿ ಮುಖ್ಯಮಂತ್ರಿಗಳ ಪುತ್ರರಾದ ನಿಖಿಲ್ ಕುಮಾರಸ್ವಾಮಿ, ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಸಿದ್ದಾರೆ.
ಹೈವೋಲ್ಟೇಜ್ ಕಣವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಶಿಗ್ಗಾವಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ನಾಮಪತ್ರ ಸಲ್ಲಿಸಿದ್ದಾರೆ.
ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರಿಂದ ಸೈಯದ್ ಅಜ್ಜಂಪೀರ್ ಖಾದ್ರಿ ಬಂಡಾಯ ಸಾರಿದ್ದಾರೆ. ಸಚಿವರಾದ ಜಮೀರ್ ಅಹಮದ್, ರಹೀಂ ಖಾನ್ ಸೇರಿ ಹಲವು ನಾಯಕರು ಮನವೊಲಿಸಲು ಯತ್ನಿಸಿದರೂ, ಕೊನೆ ಗಳಿಗೆಯಲ್ಲಿ ಖಾದ್ರಿ ನಾಮಪತ್ರ ಸಲ್ಲಿಸುವ ಮೂಲಕ ಪಕ್ಷದ ನಾಯಕರಿಗೆ ಶಾಕ್ ನೀಡಿದ್ದಾರೆ.
ಇನ್ನು ಇದೇ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಂಜುನಾಥ ಕುನ್ನೂರ ಕೂಡ ನಾಮಪತ್ರ ಸಲ್ಲಿಸಿದ್ದು, ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆ ಬಂಡಾಯ ಎದುರಾಗಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ 50 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸಂಡೂರಿನಿಂದ 7 ಮಂದಿ ಸ್ಪರ್ಧಿಸಿದ್ದು, ಶಿಗ್ಗಾವಿಯಲ್ಲಿ 26 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಾಗಿದೆ. ನಾಮಪತ್ರ ಸಲ್ಲಿಸಿದವರಲ್ಲಿ ಮೂವರು ಮಹಿಳೆಯರಿದ್ದಾರೆ.