ಬೆಂಗಳೂರು: ರಾಜ್ಯದ ಬೆಳಗಾವಿ ಲೋಕಸಭೆ ಮತ್ತು 3 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಮುಂದಿನವಾರ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ.
ಶುಕ್ರವಾರ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನಿಲ್ ಅರೋರಾ ಅವರು 5 ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದಾರೆ. ಆಯಾ ರಾಜ್ಯಗಳಲ್ಲಿ ತೆರವಾದ ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಉಪ ಚುನಾವಣೆಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸುವುದಾಗಿ ಸುನಿಲ್ ಅರೋರಾ ಹೇಳಿದ್ದರು. ಅಂತೆಯೇ, ರಾಜ್ಯದ ಬೆಳಗಾವಿ ಲೋಕಸಭೆ ಮತ್ತು ಮಸ್ಕಿ, ಬಸವಕಲ್ಯಾಣ, ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ದತೆ ಕೈಗೊಂಡಿದ್ದು, ಮುಂದಿನ ವಾರ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.