ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆಯ ಅಂಗವಾಗಿ ಮತದಾನ ನಡೆಯಲಿದೆ. ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಲ್ಲಿ, ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತಗಳಿಂದ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ರಾಜಕೀಯ ಪಕ್ಷಗಳ ಮುಖಂಡರ ಸಮಕ್ಷಮದಲ್ಲಿ ಅಣಕು ಮತದಾನ ನಡೆಯಲಿದೆ. ನಂತರ ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭಗೊಂಡು ಸಂಜೆ 6 ಗಂಟೆಯವರೆಗೆ ನಡೆಯಲಿದೆ.
ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ. ಪಾರದರ್ಶಕ ಚುನಾವಣೆಗೆ ಎಲ್ಲಾ ಹಂತದಲ್ಲಿ ಇವಿಎಂ ಮತಯಂತ್ರಗಳನ್ನು ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಗೊಂದಲವಾಗದಂತೆ ಅಗತ್ಯ ಕ್ರಮ ವಹಿಸಲಾಗಿದೆ.
ಕೇಂದ್ರ ಚುನಾವಣಾ ಆಯೋಗವು ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ತಪ್ಪದೇ ಪಾಲ್ಗೊಳ್ಳಲು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ, ಅರೆ ಎಲ್ಲ ಸರ್ಕಾರಿ ಮತ್ತು ಖಾಸಗಿ ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡಿರುವುದರಿಂದ ಪ್ರತಿಯೊಬ್ಬರೂ ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕು. ಸಂಡೂರು ಭಾಗದಲ್ಲಿ ಹೆಚ್ಚು ಕೈಗಾರಿಕಾ ವಲಯ ಇರುವುದರಿಂದ ಎಲ್ಲಾ ಕಾರ್ಮಿಕರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಅಗತ್ಯ ಕ್ರಮ ವಹಿಸಲಾಗಿದೆ.
ಶಾಂತಿಯುತವಾಗಿ ಚುನಾವಣೆ ನಡೆಸಲು ಅಗತ್ಯ ಬಂದೋಬಸ್ತ್ ಮಾಡಲಾಗಿದೆ. ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.