ಬೆಂಗಳೂರು: ರಾಜ್ಯದಲ್ಲಿ ಸುಗಮವಾಗಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಗರಿಷ್ಠ ಮತದಾನ ನಿರೀಕ್ಷೆಯೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ಕುಂಟು ನೆಪ ಹೇಳಿ ಚುನಾವಣೆ ಕರ್ತವ್ಯದಿಂದ ನುಣುಚಿಕೊಳ್ಳುವ ಸರ್ಕಾರಿ ನೌಕರರ ವಿರುದ್ಧ ಕಠಿಣ ಕ್ರಮ ಜರುಗಿಸಲು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.
ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಅನೇಕ ಸರ್ಕಾರಿ ನೌಕರರು ನಾನಾ ನೆಪಗಳನ್ನು ಹೇಳಿ ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂಬ ಮಾಹಿತಿಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದೆ. ಸುಳ್ಳು ಅಥವಾ ಕುಂಟು ನೆಪ ಹೇಳಿ ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾಗುವ ನಿಯೋಜಿತ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸಲು ಮತ್ತು ಬಂಧಿಸಲು ಅವಕಾಶವಿದ್ದು, ಈ ಅವಕಾಶವನ್ನು ಅಗತ್ಯವಾದರೆ ಬಳಸಿಕೊಳ್ಳುವಂತೆ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಆಯೋಗ ಸೂಚನೆ ನೀಡಿದೆ.