ಬೆಳಗಾವಿ: ಸಾಕು ಪ್ರಾಣಿಗಳ ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಬೆಂಗಳೂರು ನಗರದಲ್ಲಿ ಅಗತ್ಯವಿರುವ ಜಾಗ ಗುರುತಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ, ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರ ಸಾಕು ಪ್ರಾಣಿಗಳ ಅಂತ್ಯ ಸಂಸ್ಕಾರಕ್ಕೆ ಸ್ಥಳ ನಿಗದಿ ಪಡಿಸುವ ಕುರಿತಾದ ಪ್ರಶ್ನೆಗೆ ಉಪಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ನಾಲ್ಕು ಕಡೆ ವಿದ್ಯುತ್ ಚಿತಾಗಾರ ಸ್ಥಾಪನೆಗೆ ಕ್ರಮವಹಿಸಲು ಬಿಬಿಎಂಪಿಗೆ ಸೂಚನೆ ನೀಡುತ್ತೇವೆ ಎಂದು ಹೇಳಿದ್ದಾರೆ. ರಾಜರಾಜೇಶ್ವರಿ ನಗರ ವಲಯದ ಸುಮನಹಳ್ಳಿಯಲ್ಲಿ ವಿದ್ಯುತ್ ಚಿತಾಗಾರದಲ್ಲಿ ಪ್ರಾಣಿಗಳ ಶವಸಂಸ್ಕಾರ ಮಾಡಲಾಗುತ್ತಿದೆ. ದಾಸರಹಳ್ಳಿ ವಲಯದ ಶೆಟ್ಟಿಹಳ್ಳಿಯ ಸಂತಾನಹರಣ ಶಸ್ತ್ರಚಿಕಿತ್ಸೆ ಕೇಂದ್ರ, ಯಲಹಂಕ ಮತ್ತು ಮೇಡಿಹಳ್ಳಿಯಲ್ಲಿನ ಸಂತಾನಹರಣ ಶಸ್ತ್ರಚಿಕಿತ್ಸಾ ಕೇಂದ್ರಗಳ ಆವರಣದಲ್ಲಿ ಚಿತಾಗಾರ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ. ಬೆಂಗಳೂರಿನ ಇತರ ಕಡೆಗಳಲ್ಲಿಯೂ ಸಾಕು ಪ್ರಾಣಿಗಳ ಮೃತದೇಹ ಅಂತ್ಯಸಂಸ್ಕಾರಕ್ಕೆ ಸ್ಥಳ ಗುರುತಿಸಲಾಗುವುದು ಎಂದು ತಿಳಿಸಿದ್ದಾರೆ.