ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ನಿವಾರಿಸುವ ಉದ್ದೇಶದಿಂದ ಪ್ರತಿ ತಿಂಗಳ ಮೂರನೇ ಶನಿವಾರ ಹಳ್ಳಿಗಳಲ್ಲಿ ವಿದ್ಯುತ್ ಅದಾಲತ್ ನಡೆಸಲಾಗುವುದು.
ಇಂಧನ ಸಚಿವ ವಿ. ಸುನೀಲ್ ಕುಮಾರ್ ಅವರು ಎಸ್ಕಾಂಗಳ ಅಧಿಕಾರಿಗಳಿಗೆ ಈ ಕುರಿತಾಗಿ ಸೂಚನೆ ನೀಡಿದ್ದು, ಪ್ರತಿ ತಿಂಗಳ ಮೂರನೇ ಶನಿವಾರ ಹಳ್ಳಿಗಳಲ್ಲಿ ವಿದ್ಯುತ್ ಅದಾಲತ್ ನಡೆಸುವ ಮೂಲಕ ವಿದ್ಯುತ್ ಪೂರೈಕೆ ಸಂಬಂಧಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಹೇಳಿದ್ದಾರೆ.
ವ್ಯವಸ್ಥಾಪಕ ನಿರ್ದೇಶಕರ ಮಟ್ಟದಿಂದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವರೆಗಿನ ಎಲ್ಲ ಅಧಿಕಾರಿಗಳು ತಮ್ಮ ವಿಭಾಗಗಳ ವ್ಯಾಪ್ತಿಯಲ್ಲಿರುವ ಕೊನೆಯ ಗ್ರಾಮದವರೆಗೆ ಭೇಟಿ ನೀಡಿ ವಿದ್ಯುತ್ ಪೂರೈಕೆ ಸಮಸ್ಯೆಗಳನ್ನು ಬಗೆಹರಿಸಬೇಕು. ಎಲ್ಲರೂ ಒಂದೇ ಹಳ್ಳಿಗೆ ಭೇಟಿ ಕೊಡದೆ ಒಬ್ಬೊಬ್ಬರು ಒಂದು ಹಳ್ಳಿಗೆ ಭೇಟಿ ನೀಡುವ ಮೂಲಕ ಪ್ರತಿ ಹಳ್ಳಿಗಳಲ್ಲಿ ವಿದ್ಯುತ್ ಅದಾಲತ್ ನಡೆಸಬೇಕು ಎಂದು ಸಚಿವರು ತಿಳಿಸಿದ್ದಾರೆ.
ಅಧಿಕಾರಿಗಳು ವಿದ್ಯುತ್ ಅದಾಲತ್ ನಲ್ಲಿ ಕಡ್ಡಾಯವಾಗಿ ಭಾಗವಹಿಸಿ ಅಭಿಯಾನದ ಮಾಹಿತಿಗಳನ್ನು ಪ್ರತಿತಿಂಗಳು ನಿಗದಿತ ನಮೂನೆಯಲ್ಲಿ ನಮೂದಿಸಿ ಸಂಬಂಧಿಸಿದ ವ್ಯವಸ್ಥಾಪಕ ನಿರ್ದೇಶಕರಿಗೆ ಕಳುಹಿಸುವಂತೆ ಸೂಚನೆ ನೀಡಲಾಗಿದೆ.