ಬೆಂಗಳೂರು: ಅರ್ಜಿ ಸಲ್ಲಿಸಿದ ತಕ್ಷಣ ವಿದ್ಯುತ್ ಸಂಪರ್ಕ ನೀಡುವ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ವಿದ್ಯುತ್ ನಿಗಮದ 53ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಬಡವರು ಮನೆ ನಿರ್ಮಿಸಿದಾಗ ವಿದ್ಯುತ್ ಸಂಪರ್ಕ ಬೇಗನೆ ಸಿಗುವುದಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ಕಿರಿಕಿರಿ ಉಂಟುಮಾಡದೆ ತಕ್ಷಣವೇ ವಿದ್ಯುತ್ ಸಂಪರ್ಕ ನೀಡಲು ಶೀಘ್ರವೇ ನಿಯಮಗಳನ್ನು ಸರಳಿಕರಣ ಮಾಡಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಯಾವುದೇ ಭಾಗದ ವ್ಯಕ್ತಿ ಮನೆ ಕಟ್ಟಿಕೊಂಡು ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಿದರೆ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಲು ಆದೇಶ ಹೊರಡಿಸಲಾಗುವುದು. 2008 ರಿಂದ ರೈತರಿಗೆ ಉಚಿತವಾಗಿ ವಿದ್ಯುತ್ ನೀಡಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 75 ಯೂನಿಟ್ ವರೆಗೂ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಇಂಧನ ಸಚಿವ ವಿ. ಸುನಿಲ್ ಕುಮಾರ್, ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷ ಪಿ. ರವಿಕುಮಾರ್, ಕೆಪಿಟಿಸಿಎಲ್ ಅಧ್ಯಕ್ಷೆ ಡಾ. ಮಂಜುಳಾ, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರನಾಯಕ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್. ಶ್ರೀಕರ್ ಇದ್ದರು.