ಬೆಂಗಳೂರು: ರೈತರ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಬಳಕೆ ಕಡಿಮೆ ಮಾಡಿ ಸೌರಶಕ್ತಿ ಬಳಕೆ ಮೂಲಕ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್ಸೆಟ್ ಬಳಕೆ ಉತ್ತೇಜಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಮಾರ್ಚ್ 9ರಂದು ಬೆಂಗಳೂರಿನ ಜಿಕೆವಿಕೆಯಲ್ಲಿ ರೈತ ಸೌರ ಶಕ್ತಿ ಮೇಳ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಮೇಳದಲ್ಲಿ ರೈತರಿಗೆ ಸೋಲಾರ್ ಪಂಪ್ ಸೆಟ್, ಸಹಾಯಧನ ಸೇರಿ ಎಲ್ಲಾ ಮಾಹಿತಿ ನೀಡಲಾಗುವುದು ಎಂದು ಹೇಳಿದ್ದಾರೆ.
ಸೋಲಾರ್ ಪಂಪ್ಸೆಟ್ ಬಳಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಕುಸುಮ್ ಬಿ ಯೋಜನೆ ಅನುಷ್ಠಾನಕ್ಕೆ ಒತ್ತು ನೀಡಿದೆ. ಮೇಳದಲ್ಲಿ ರೈತರು ಸೌರ ಪಂಪ್ಸೆಟ್ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಜಮೀನಿನಲ್ಲಿ ಅಳವಡಿಸಿಕೊಳ್ಳಬಹುದು. ಇದುವರೆಗೆ ಸೋಲಾರ್ ಪಂಪ್ಸೆಟ್ ಅಳವಡಿಕೆಗೆ ನೀಡುತ್ತಿದ್ದ ಶೇಕಡ 30ರಷ್ಟು ಸಹಾಯಧನವನ್ನು ಶೇಕಡ 50ಕ್ಕೆ ಹೆಚ್ಚಳ ಮಾಡಲಾಗಿದೆ. ಸರ್ಕಾರದಿಂದಲೇ ಪಂಪ್, ಮೀಟರ್, ಪೈಪ್ ವೇ ಒದಗಿಸಲಾಗುವುದು ಎಂದು ಹೇಳಿದ್ದಾರೆ.