ಬೆಂಗಳೂರು: ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸಜ್ಜಾಗಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ವಿದ್ಯುತ್ ಉತ್ಪಾದನೆ, ಖರೀದಿ, ವಿನಿಮಯ ಮತ್ತು ಪ್ರಸರಣದ ಬಗ್ಗೆ ಕರ್ನಾಟಕ ವಿದ್ಯುತ್ ನಿಗಮ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ್ದಾರೆ.
ಬೇಸಿಗೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಳೆದ ಬೇಸಿಗೆಯಲ್ಲಿ ಸರಾಸರಿ 3,600 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ದಾಖಲೆ ನಿರ್ಮಿಸಲಾಗಿತ್ತು. ಈ ಬಾರಿ ಅದಕ್ಕಿಂತ ಹೆಚ್ಚು ಪ್ರಮಾಣದಲ್ಲಿ ವಿದ್ಯುತ್ ಉತ್ಪಾದಿಸುವ ಮೂಲಕ ಹೊಸ ದಾಖಲೆ ನಿರ್ಮಿಸಬೇಕು. ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲಾ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಬೇಕು ಎಂದು ಸೂಚಿಸಿದ್ದಾರೆ.
ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಫೆಬ್ರವರಿ ಅಂತ್ಯದೊಳಗೆ ಎಲ್ಲಾ ಘಟಕಗಳು ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆಗೆ ಸಿದ್ಧವಾಗಬೇಕು. ಬೇಡಿಕೆ ಮತ್ತು ಪೂರೈಕೆ ಮಧ್ಯೆ ವ್ಯತ್ಯಾಸವಾಗದಂತೆ ಸಮರ್ಪಕ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲು ಸಚಿವರು ಸೂಚಿಸಿದ್ದಾರೆ.