2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಸಿಆರ್ಪಿಎಫ್ ಯೋಧರು ಸಾಗುತ್ತಿದ್ದ ವಾಹನದ ಮೇಲೆ ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ ಪರಿಣಾಮ ಭಾರತೀಯ ಸೇನೆಯ 40 ಮಂದಿ ವೀರ ಯೋಧರು ಹುತಾತ್ಮರಾಗಿದ್ದರು. ಇದನ್ನು ಸಂಭ್ರಮಿಸಿ ಅಂದು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ವಿಕೃತನೊಬ್ಬನಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಬೆಂಗಳೂರಿನ ಕಾಚರಕನಹಳ್ಳಿಯ ಫಯಾಜ್ ರಶೀದ್ ಎಂಬ ಇಂಜಿನಿಯರಿಂಗ್ ವಿದ್ಯಾರ್ಥಿ ವಿಶೇಷ ನ್ಯಾಯಾಲಯದಿಂದ 5 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದು, ಈತ ಪುಲ್ವಾಮಾ ದಾಳಿಯನ್ನು ಸಂಭ್ರಮಿಸಿ ಪೋಸ್ಟ್ ಹಾಕಿಸಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದರು. ಅಲ್ಲದೆ ಆತನ ಮೊಬೈಲ್ ಫೋನನ್ನು ವಶಪಡಿಸಿಕೊಂಡು ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಇದೆ ಫೋನ್ನಿಂದ ಆತ ಪೋಸ್ಟ್ ಹಾಕಿರುವುದನ್ನು ಖಚಿತಪಡಿಸಿಕೊಂಡಿದ್ದರು.
2019ರ ಫೆಬ್ರವರಿಯಲ್ಲೇ ಆತನ ಬಂಧನವಾಗಿದ್ದು, ಈತ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿರುವ ಪರಿಣಾಮ ಅಂದಿನಿಂದಲೂ ಜೈಲಿನಲ್ಲೇ ಇದ್ದಾನೆ. ಇದೀಗ ಬೆಂಗಳೂರಿನ ವಿಶೇಷ ನ್ಯಾಯಾಲಯ ಇಂಜಿನಿಯರಿಂಗ್ ಮೂರನೇ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಫಯಾಜ್ ರಶೀದ್ ಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.