
ರಾಯಚೂರು: ಕಾಂಗ್ರೆಸ್ ಪಕ್ಷದ ಸದಸ್ಯತ್ವ ಮಾಡಿಸಲು ಆಫರ್ ಕೊಡುವುದರ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಗಿ ಟೀಕಿಸಿದ್ದಾರೆ.
ಸದಸ್ಯತ್ವ ಮಾಡಿಸಲು ಆಫರ್ ಕೊಡುವ ದುಸ್ಥಿತಿಗೆ ಕಾಂಗ್ರೆಸ್ ಪಕ್ಷ ಬಂದಿದೆ. ಆಗ ಕಾಂಗ್ರೆಸ್ ಪಕ್ಷ ಅಂದ್ರೆ ಯುವಕರಿಗೆ ಮೈನವಿರೇಳುತ್ತಿತ್ತು. ಸುಭಾಷ್ ಚಂದ್ರ ಬೋಸ್, ಚಂದ್ರಶೇಖರ ಆಜಾದ್, ಸರ್ದಾರ್ ವಲ್ಲಭಬಾಯ್ ಪಟೇಲ್ ಅವರಂತಹವರು ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದರು. ಈಗ ಜೈಲಿಗೆ ಹೋಗಿ ಬಂದವರು ಅಧ್ಯಕ್ಷರಾಗಿದ್ದಾರೆ ಎಂದು ಹೇಳಿದ್ದಾರೆ.
ತಿಹಾರ್ ಜೈಲಿಗೆ ಹೋಗಿ ಬಂದ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಗೆ ಹೋಗಿ ಬಂದ ನಲಪಾಡ್ ಯುವ ಘಟಕದ ಅಧ್ಯಕ್ಷರಾಗಿದ್ದಾರೆ. ಒಬ್ಬರು ಭ್ರಷ್ಟಾಚಾರದ ಆರೋಪದಲ್ಲಿ ಜೈಲಿಗೆ ಹೋಗಿ ಬಂದರೆ, ಮತ್ತೊಬ್ಬರು ಕೊಲೆ ಪ್ರಯತ್ನ ಮಾಡಿ ಜೈಲಿಗೆ ಹೋಗಿ ಬಂದವರು. ಹೀಗಾಗಿ ಸದಸ್ಯತ್ವ ಮಾಡಿಸಲು ಆಮಿಷ ತೋರಿಸದೆ ಕಾಂಗ್ರೆಸ್ ಪಕ್ಷಕ್ಕೆ ಬೇರೆ ದಾರಿಯೇ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.