ಬೆಂಗಳೂರು: ಕಾರ್ಮಿಕರಿಗೆ ಇಎಸ್ಐ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಚಿಕಿತ್ಸೆ ನೀಡುವಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡುವುದನ್ನು ಕಡಿಮೆ ಮಾಡಬೇಕು. ಇಎಸ್ಐ ಆಸ್ಪತ್ರೆಗಳಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ವಿಕಾಸಸೌಧದಲ್ಲಿ ಬುಧವಾರ ನಡೆದ ಕಾರ್ಮಿಕ ಇಲಾಖೆ ಅಧಿಕಾರಿಗಳು ಮತ್ತು ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳೊಂದಿಗಿನ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ಶೇಕಡ 4ರಿಂದ ಶೇಕಡ 15ರವರೆಗೆ ಇಎಸ್ಐ ಕಾರ್ಡ್ ದಾರರು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿದ್ದಾರೆ. ಇದನ್ನು ಕಡಿಮೆ ಮಾಡಲು ಇಎಸ್ಐ ಆಸ್ಪತ್ರೆಗಳಲ್ಲಿ ಅಗತ್ಯ ಸೌಕರ್ಯ ಕಲ್ಪಿಸುವಂತೆ ಸೂಚಿಸಲಾಗಿದೆ. ಸೌಲಭ್ಯ ಕಲ್ಪಿಸಿದ್ದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಆಗುವುದನ್ನು ತಡೆಯಬಹುದಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.