
ಹುಬ್ಬಳ್ಳಿ: ಸತ್ಯ, ಧರ್ಮ, ಅಹಿಂಸೆ ಪರಮ ಧ್ಯೇಯವನ್ನಾಗಿ ಮಾಡಿಕೊಂಡಿರುವ ಜೈನ ಸಮಾಜದ ಅಭಿವೃದ್ಧಿಗೆ ನಿಗಮ ಸ್ಥಾಪಿಸುವುದು ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಹುಬ್ಬಳ್ಳಿ ತಾಲೂಕಿನ ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಂಗಳವಾರ ಸಂಜೆ ತೀರ್ಥಂಕರರ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆಚಾರ್ಯ ಗುಣಧರನಂದಿ ಮಹಾರಾಜರು ಹಾಗೂ ಸಮಾಜದ ಹಿರಿಯರು ಜೈನ ಸಮಾಜ ಅಭಿವೃದ್ಧಿಗೆ ನಿಗಮ ಸ್ಥಾಪನೆಗೆ ಬೇಡಿಕೆ ಇಟ್ಟಿದ್ದು, ಇದಕ್ಕೆ ಸರ್ಕಾರದಿಂದ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು. ಬಜೆಟ್ ನಲ್ಲಿ ಜೈನ ಸಮಾಜ ಅಭಿವೃದ್ಧಿ ನಿಗಮ ಸ್ಥಾಪನೆ ಘೋಷಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.