ಬೆಂಗಳೂರು: ಜಲಸಂಪನ್ಮೂಲ ಇಲಾಖೆಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ ಕರುನಾಡಿನ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆ ಮೊದಲ ಹಂತ ಉದ್ಘಾಟನೆ ಕಾರ್ಯಕ್ರಮ ಸೆಪ್ಟೆಂಬರ್ 6ರಂದು ಮಧ್ಯಾಹ್ನ 12 ಗಂಟೆಗೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿಯಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಯೋಜನೆಯ ಲೋಕಾರ್ಪಣೆ ಮಾಡಲಿದ್ದಾರೆ. ಸಚಿವರಾದ ಡಾ.ಜಿ. ಪರಮೇಶ್ವರ್, ಕೆ.ಜೆ. ಚಾರ್ಜ್, ಕೆ.ಎನ್. ರಾಜಣ್ಣ, ರಾಮಲಿಂಗಾರೆಡ್ಡಿ, ಕೆ.ಹೆಚ್. ಮುನಿಯಪ್ಪ, ಡಾ.ಎಂ.ಸಿ. ಸುಧಾಕರ್, ಬೈರತಿ ಸುರೇಶ್ ಉಪಸ್ಥಿತರಿರುವರು. ಹಾಸನ ಸಂಸದ ಶ್ರೇಯಸ್ ಪಟೇಲ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಸಕಲೇಶಪುರ ಶಾಸಕ ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
ಚಿಕ್ಕಮಗಳೂರು, ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೋಜನೆಯಿಂದ ಅನುಕೂಲವಾಗಲಿದೆ. 7 ಜಿಲ್ಲೆಗಳ 29 ತಾಲೂಕುಗಳನ್ನು 6657 ಗ್ರಾಮಗಳು, 38 ಪಟ್ಟಣ ಪ್ರದೇಶದ 75 ಲಕ್ಷ ಜನ ಪ್ರಯೋಜನ ಪಡೆಯಲಿದ್ದಾರೆ. ಕುಡಿಯುವ ನೀರು, ಕೆರೆಗಳನ್ನು ತುಂಬಿಸುವ ಯೋಜನೆಯ ಒಟ್ಟು ನೀರಿನ ಪ್ರಮಾಣ 24.01 ಟಿಎಂಸಿ ಆಗಿದೆ.