ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಲೋಕಾರ್ಪಣೆ ಮಾಡಿದರು.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ದೊಡ್ಡನಾಗರ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ, ಗಂಗೆ ಪೂಜೆ ನೆರವೇರಿಸುವ ಮೂಲಕ 9ನೇ ಪಂಪ್ ಹೌಸ್ ಉದ್ಘಾಟನೆ ನೆರವೇರಿಸಿದರು. ಈ ಮೂಲಕ ಇಂದಿನಿಂದ ಎತ್ತಿನಹೊಳೆ ಕಾಲುವೆಯಲ್ಲಿ ಪಶ್ಚಿಮ ಘಟ್ಟ ನೀರು ಹರಿಯಲಾರಂಭಿಸಿದೆ.
ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳದಿಂದ ಮುಂಗಾರು ಅವಧಿಯಲ್ಲಿ (139 ದಿನಗಳು) 24.01 ಟಿ.ಎಂ.ಸಿ ಪ್ರಮಾಣದ ಪ್ರವಾಹದ ನೀರನ್ನು 7 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿನ ಬರಪೀಡಿತ 29 ತಾಲ್ಲೂಕಿನ 38 ಪಟ್ಟಣ ಪ್ರದೇಶದ ಹಾಗೂ 6657 ಗ್ರಾಮಗಳ ಸುಮಾರು 75.59 ಲಕ್ಷ ಜನರಿಗೆ ಮತ್ತು ಜಾನುವಾರುಗಳಿಗೆ 14.056 ಟಿ.ಎಂ.ಸಿ ಕುಡಿಯುವ ನೀರನ್ನು ಒದಗಿಸಲಾಗುತ್ತದೆ.
ಜೊತೆಗೆ 5 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ತುಮಕೂರು ವ್ಯಾಪ್ತಿಯಲ್ಲಿ ಬರುವ 527 ಕೆರೆಗಳಿಗೆ 9.953 ಟಿ.ಎಂ.ಸಿ ಪ್ರಮಾಣದ ನೀರನ್ನು ಕೆರೆಗಳ ಸಾಮರ್ಥ್ಯದ ಶೇ. 50% ರಷ್ಟು ತುಂಬಿಸಿ ಅಂತರ್ಜಲ ಮರುಪೂರಣ ಮಾಡುವ ರೂ.23,251.66 ಕೋಟಿಗಳ ಮೊತ್ತದ ಉದ್ದೇಶಿತ ರಾಜ್ಯದ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಯೋಜನೆಯಾಗಿದೆ.
2014ರಲ್ಲಿ ಆರಂಭಗೊಂಡ ಯೋಜನೆಯ ಮೊದಲನೇ ಹಂತದ ಏತ (Lift) ಮತ್ತು ವಿದ್ಯುತ್ ಪೂರೈಕೆಯ ಕಾಮಗಾರಿ ಇದೀಗ ಅನುಷ್ಠಾನಗೊಂಡಿದ್ದು, ಪ್ರಸ್ತುತ ವಿಯರ್-1,2,4,5,6,7&8 ರಿಂದ ಒಟ್ಟಾರೆ 79.50 ಕ್ಯುಮೆಕ್ಸ್ (2800.00 ಕ್ಯೂಸೆಕ್ಸ್) ನೀರನ್ನೆತ್ತಿ ವಿತರಣಾ ತೊಟ್ಟಿ-3 ರವರೆಗೆ (Delivery Chamber-3) ಪೂರೈಸಿ ತದನಂತರ ವಿತರಣಾ
ತೊಟ್ಟಿ-3 ರಿಂದ ನೀರನ್ನೆತ್ತಿ ವಿತರಣಾ ತೊಟ್ಟಿ-4 ರ ಮುಖಾಂತರ ಗುರುತ್ವ ಕಾಲುವೆಗೆ 79.50 ಕ್ಯುಮೆಕ್ಸ್ (2800.೦೦ ಕ್ಯೂಸೆಕ್ಸ್) ನೀರನ್ನು ಹರಿಸಲು ಯೋಜಿಸಲಾಗಿದೆ.