ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳನ್ನು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಮಾಗಡಿ ಸಮೀಪದ ಕುದೂರು ಖಾಸಗಿ ಪ್ರೌಢಶಾಲೆಯಲ್ಲಿ ನಡೆದಿದೆ.
ಫೆಬ್ರವರಿಯಲ್ಲಿ ನಡೆದ ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಫಲಿತಾಂಶ ಮಾರ್ಚ್ 9 ರಂದು ಪ್ರಕಟಿಸಲಾಗಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ ಹಿನ್ನೆಲೆಯಲ್ಲಿ ಖಾಸಗಿ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಇತರ ಶಿಕ್ಷಕರು ಮೂವರು ವಿದ್ಯಾರ್ಥಿಗಳನ್ನು ಬಾಸುಂಡೆ ಬರುವಂತೆ ಥಳಿಸಿದ್ದಾರೆ.
ಮಗನ ಮೇಲೆ ಬಾಸುಂಡೆ ಇರುವುದನ್ನು ಗಮನಿಸಿದ ವಿದ್ಯಾರ್ಥಿಯೊಬ್ಬನ ತಾಯಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ. ಮಂಗಳವಾರ ಶಾಲೆಗೆ ಭೇಟಿ ನೀಡಿ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಪರಿಶೀಲನೆ ನಡೆಸಲಿದ್ದಾರೆ. ಪರಿಶೀಲನೆ ಬಳಿಕ ಪ್ರಕರಣ ದಾಖಲಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.
ಮುಖ್ಯ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಲಿ, ಅವರ ಭವಿಷ್ಯಕ್ಕೆ ಒಳ್ಳೆಯದಾಗಲಿ ಎನ್ನುವ ಉದ್ದೇಶದಿಂದ ಹೊಡೆದಿದ್ದು ನಿಜ. ತಪ್ಪಾಗಿದ್ದರೆ ಪೋಷಕರಲ್ಲಿ ಕ್ಷಮೆಯಾಚಿಸುವುದಾಗಿ ಖಾಸಗಿ ಶಾಲೆಯ ಮುಖ್ಯಶಿಕ್ಷಕ ಹೇಳಿದ್ದಾರೆನ್ನಲಾಗಿದೆ.