![](https://kannadadunia.com/wp-content/uploads/2023/04/13ea2ac8-e510-447f-a93e-dc79468bf7b2.jpg)
ಕೇಂದ್ರ ಸರ್ಕಾರ ಇತ್ತೀಚೆಗೆ ಹೊರಡಿಸಿದ ಸಿಆರ್ಪಿಎಫ್ ಕಾನ್ಸ್ಟೇಬಲ್ ನೇಮಕಾತಿ ಕುರಿತ ಅಧಿಸೂಚನೆಯಲ್ಲಿ ಪರೀಕ್ಷೆಯನ್ನು ಹಿಂದಿ ಹಾಗೂ ಇಂಗ್ಲಿಷ್ ನಲ್ಲಿ ಮಾತ್ರ ಬರೆಯುವಂತೆ ಹೇಳಿದ್ದು ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.
ಪ್ರಾದೇಶಿಕ ಭಾಷೆಗಳಲ್ಲೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮೊದಲಾದವರು ಆಗ್ರಹಿಸಿದ್ದರು.
ಇದೀಗ ಕೇಂದ್ರ ಗೃಹ ಸಚಿವಾಲಯ ಮಹತ್ವದ ತೀರ್ಮಾನ ಒಂದನ್ನು ಕೈಗೊಂಡಿದ್ದು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ನೇಮಕಾತಿ ವೇಳೆ ಕನ್ನಡವೂ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಿಕೊಡಲಾಗುತ್ತಿದೆ.
ಹೀಗಾಗಿ ಹಿಂದಿ, ಇಂಗ್ಲಿಷ್ ಜೊತೆಗೆ ಕನ್ನಡ, ಬೆಂಗಾಳಿ, ಗುಜರಾತಿ, ಮರಾಠಿ, ಮಲಯಾಳಂ, ತಮಿಳು, ತೆಲುಗು, ಒಡಿಯಾ, ಅಸ್ಸಾಮಿ, ಉರ್ದು, ಪಂಜಾಬಿ, ಮಣಿಪುರಿ ಹಾಗೂ ಕೊಂಕಣಿ ಭಾಷೆಯಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ.
ಜನವರಿ 1, 2024 ರಿಂದ ಇದು ಅನುಷ್ಠಾನಕ್ಕೆ ಬರಲಿದೆ ಎನ್ನಲಾಗಿದ್ದು, ಇದರಿಂದಾಗಿ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ.