ಬೆಂಗಳೂರು: ಮಹಾರಾಷ್ಟ್ರ ಚುನಾವಣೆಯಲ್ಲಿ ಕರ್ನಾಟಕದ ಗ್ಯಾರಂಟಿ ಯೋಜನೆಗಳ ಕುರಿತು ಅವಮಾನವಾಗುವ ರೀತಿಯಲ್ಲಿ ಜಾಹೀರಾತು ಪ್ರಕಟಿಸಲಾಗಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ ಮೈತ್ರಿಕೂಟ ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿದ್ದ ನಂತರ ಬಿಜೆಪಿಯವರು, ಕರ್ನಾಟಕದಲ್ಲಿ 5 ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡಿಲ್ಲ. ಮಹಾರಾಷ್ಟ್ರದಲ್ಲಿಯೂ ಗ್ಯಾರಂಟಿ ಯೋಜನೆ ಅನುಷ್ಠಾನವಾಗುವುದಿಲ್ಲವೆಂದು ಸುಳ್ಳು ಜಾಹೀರಾತು ನೀಡಿದ್ದು, ಇದರ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂದು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿದೆ. ಇದರ ವಿರುದ್ಧ ಮಹಾರಾಷ್ಟ್ರ ಜಾಹೀರಾತು ಪ್ರಕಟಿಸಿದ್ದು, ಇದನ್ನು ಸಹಿಸುವುದಿಲ್ಲ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.