ನವದೆಹಲಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಂಜಾಬ್ ಮತ್ತು ಹರ್ಯಾಣ ರೈತರು ಇಂದು ದೆಹಲಿ ಚಲೋಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ತಮ್ಮ ಬೇಡಿಕೆಗಳ ಬಗ್ಗೆ ಇಬ್ಬರು ಕೇಂದ್ರ ಸಚಿವರೊಂದಿಗೆ ಐದು ಗಂಟೆಗಳ ಸುದೀರ್ಘ ಮಾತುಕತೆ ವಿಫಲವಾದ ನಂತರ ರೈತರು ಇಂದು ತಮ್ಮ ‘ದೆಹಲಿ ಚಲೋ’ ಮೆರವಣಿಗೆಯನ್ನು ಪ್ರಾರಂಭಿಸಲು ಸಜ್ಜಾಗಿದ್ದಾರೆ.
ಇದಕ್ಕೂ ಮುನ್ನ ಸೋಮವಾರ, ಪ್ರತಿಭಟನೆಗೆ ಸೇರಲು ಪಂಜಾಬ್ ವಿವಿಧ ಭಾಗಗಳಿಂದ ಟ್ರಾಕ್ಟರ್ ಮೂಲಕ ಬಂದು ರೈತರ ಪ್ರತಿಭಟನೆ ನಡೆಸಿದ್ದಾರೆ. ಮುಖ್ಯವಾಗಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನು ಜಾರಿಗೆ ಒತ್ತಾಯಿಸಲಾಗಿದೆ. ತಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸಲು 200 ಕ್ಕೂ ಹೆಚ್ಚು ರೈತ ಸಂಘಗಳು ದೆಹಲಿಗೆ ತೆರಳಲಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಘೋಷಿಸಿವೆ.
ದೆಹಲಿಯಲ್ಲಿ, ಪ್ರತಿಭಟನಾ ನಿರತ ರೈತರು ಮಂಗಳವಾರ ನಗರವನ್ನು ಪ್ರವೇಶಿಸದಂತೆ ತಡೆಯಲು ಸಿಂಘು, ಟಿಕ್ರಿ ಮತ್ತು ಗಾಜಿಪುರದಲ್ಲಿ ರಾಷ್ಟ್ರ ರಾಜಧಾನಿ ಗಡಿಗಳನ್ನು ಮುಚ್ಚಲು ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿಯನ್ನು ಬೃಹತ್ ಪ್ರಮಾಣದಲ್ಲಿ ನಿಯೋಜಿಸಲಾಗಿದೆ.