ನವದೆಹಲಿ: ರೈತರಿಗೆ ಮಾರಕವಾದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದೇ ವೇಳೆ ಕೇಂದ್ರದ ಕೃಷಿ ನೀತಿಗಳ ಬಗ್ಗೆ ಚರ್ಚಿಸಲು ಸಮಿತಿ ರಚಿಸುವ ಪ್ರಸ್ತಾಪವನ್ನು ಸರ್ಕಾರ ಮುಂದಿಟ್ಟಿದೆ.
ಆದರೆ, ಇದಕ್ಕೆ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕೇಂದ್ರದ ಕೃಷಿ ನೀತಿಗಳ ಕುರಿತಾಗಿ ಚರ್ಚೆ ನಡೆಸಲು ತಜ್ಞರು, ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸುವುದಾಗಿ ಕೇಂದ್ರ ಸರ್ಕಾರ ಹೇಳಿದ್ದು, ಈ ಸಮಿತಿಗೆ ತಮ್ಮ ಪ್ರತಿನಿಧಿಗಳನ್ನು ಸೂಚಿಸಬೇಕೆಂದು ರೈತರಿಗೆ ಮನವಿ ಮಾಡಲಾಗಿದೆ. ಆದರೆ, ಕೇಂದ್ರದಿಂದ ಸಮಿತಿ ರಚನೆ ಪ್ರಸ್ತಾಪವನ್ನು ರೈತರು ತಿರಸ್ಕರಿಸಿದ್ದಾರೆ. ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಕೈಬಿಡಬೇಕೆಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.
ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಭೆಯಲ್ಲಿ ತಜ್ಞರನ್ನು ಒಳಗೊಂಡ ಸಮಿತಿ ರಚಿಸುವ ಬಗ್ಗೆ ಕೇಂದ್ರ ಸರ್ಕಾರ ತಿಳಿಸಿದೆ. ಆದರೆ, ರೈತರ ಸಂಘಟನೆಗಳ ಪ್ರತಿನಿಧಿಗಳು ಸಮಿತಿ ರಚನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿರುವ ರೈತ ಮುಖಂಡರು ಸರ್ಕಾರವೇ ನೇರವಾಗಿ ರೈತ ನಾಯಕರೊಂದಿಗೆ ಮಾತನಾಡಬೇಕೆಂದು ಆಗ್ರಹಿಸಿದ್ದಾರೆ.