ಬೆಂಗಳೂರು: ಬಾಣೆ, ಕುಮ್ಕಿ, ಸೊಪ್ಪಿನಬೆಟ್ಟ, ಬೆಟ್ಟದ ಭೂಮಿ ಮೊದಲಾದ ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡುವ ರೈತರಿಗೆ ಸಿಹಿ ಸುದ್ದಿ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಕೆ. ಹರೀಶ್ ಕುಮಾರ್ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ತಿಂಗಳೊಳಗೆ ಬಾಣೆ, ಕುಮ್ಕಿ ಮೊದಲಾದ ಇಂತಹ ಭೂಮಿಯಲ್ಲಿ ಕೃಷಿ ಮಾಡುವ ರೈತರಿಗೆ ಸಿಹಿಸುದ್ದಿ ನೀಡುತ್ತೇವೆ ಎಂದರು.
ಇಂತಹ ಭೂಮಿಯಲ್ಲಿ ಕೃಷಿ ಕಾರ್ಯ ನಡೆಸುತ್ತಿರುವ ರೈತರಿಗೆ ಭೂಮಿಯನ್ನು ಕೊಡಲು ಆಗುತ್ತಿಲ್ಲ. ಸರ್ಕಾರಕ್ಕೂ ಆದಾಯ ಬರುತ್ತಿಲ್ಲ. ಹೀಗಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಂಪುಟ ಉಪಸಮಿತಿ ರಚಿಸಲಾಗಿದೆ. ಮಲೆನಾಡು ಜಿಲ್ಲೆಗಳಿಗೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ ಸಮಸ್ಯೆ ಇತ್ಯರ್ಥಗೊಳಿಸಲಾಗುವುದು. ಮಲೆನಾಡಿನಲ್ಲಿ ಕಾಫಿ ಬೆಳೆಗಾರರಿಗೆ ಭೂಮಿ ಲೀಸ್ ಗೆ ಕೊಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.