ಬೆಂಗಳೂರು: ರಾಜ್ಯದ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಒತ್ತಾಯಿಸಿ ಡಿಸೆಂಬರ್ 16ರಂದು ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ.
ರಾಜ್ಯ ರೈತ ಸಂಘಗಳ ಏಕೀಕರಣ ಹೋರಾಟ ಸಮಿತಿ ಮುಖ್ಯಸ್ಥರಾದ ಪಚ್ಚೆ ನಂಜುಂಡಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ರೈತರ ಸಾಲ ಸಂಪೂರ್ಣ ಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಸರಿಯಾದ ಮಳೆ ಇಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿಸೆಂಬರ್ 16ರಂದು ಬೆಳಗ್ಗೆ 9 ಗಂಟೆಗೆ ಬೆಳಗಾವಿಯ ರೈತ ಸರ್ಕಲ್ ನಿಂದ ಸುವರ್ಣ ವಿಧಾನಸೌಧದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಅರ್ಹ ರೈತರಿಗೆ ಬಗರ್ ಹುಕುಂ ಜಮೀನು ನೀಡಬೇಕು. ಕಸ್ತೂರಿ ರಂಗನ್ ವರದಿ ಹಿಂಪಡೆಯಬೇಕು. ಆಹಾರದ ಬೆಳೆಗಳಲ್ಲಿ ಕುಲಾಂತರಿ ಬೀಜಗಳ ಪ್ರಯೋಗ ನಡೆಸಬಾರದು. ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.