
ಬೆಂಗಳೂರು: ಬೇಸಿಗೆ ಅವಧಿಯಲ್ಲಿ ಬೆಳೆಗಳಿಗೆ ನೀರು ಹರಿಸಲು ವಿದ್ಯುತ್ ಸಮಸ್ಯೆ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು, ಪಂಪ್ಸೆಟ್ ಗಳಿಗೆ 7 ಗಂಟೆ 3 ಫೇಸ್ ವಿದ್ಯುತ್ ಒದಗಿಸುವುದಾಗಿ ತಿಳಿಸಿದ್ದಾರೆ.
ವಿದ್ಯುತ್ ಕೊರತೆ ಉಂಟಾದಲ್ಲಿ ಬೇರೆ ರಾಜ್ಯಗಳಿಂದ ಪೂರೈಕೆ ಮಾಡಿಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುವುದು. ರೈತರ ಪಂಪ್ ಸೆಟ್ ಗಳಿಗೆ ನಿರಂತರವಾಗಿ 7 ಗಂಟೆ 3 ಫೇಸ್ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಹೇಳಿದ್ದಾರೆ.
ಕೆಐಎಡಿಬಿ ವತಿಯಿಂದ ರಾಜ್ಯದ ವಿವಿಧಡೆ ಜಮೀನು ಭೂಸ್ವಾಧೀನಪಡಿಸಿಕೊಂಡ ಸಂದರ್ಭದಲ್ಲಿ ಜಮೀನು ಕಳೆದುಕೊಂಡ ರೈತರಿಗೆ ಅಲ್ಲಿ ಸ್ಥಾಪನೆಯಾಗುವ ಉದ್ಯಮಗಳಲ್ಲಿ ಉದ್ಯೋಗ ಕೊಡಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿ ರಚಿಸಲಾಗುವುದು ಎಂದು ಹೇಳಿದ್ದಾರೆ.