ದಾವಣಗೆರೆ: ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಏ. 1 ರಿಂದ 30ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ.
ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ. ಅವರು ಪರಿಶೀಲನೆ ನಡೆಸಿ ಮಾತನಾಡಿದರು. ಲಸಿಕೆ ಕಾರ್ಯಕ್ಕೆ ಪಶು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು. ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
ಕಾಲುಬಾಯಿ ರೋಗ ತಡೆಗಟ್ಟಲು ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು. ನಿರ್ಲಕ್ಷ್ಯ ಮಾಡಿದ್ದಲ್ಲಿ ಜಾನುವಾರುಗಳಿಂದ ಜಾನುವಾರಿಗೆ ಕಾಯಿಲೆ ಹರಡುವ ಸಾಧ್ಯತೆಗಳಿದ್ದು, ಸಮಸ್ಯೆ ಗಂಭೀರವಾಗಲಿದೆ. ಜಾನುವಾರುಗಳಿಗೆ ಲಸಿಕೆ ಹಾಕಿಸಿ, ರೋಗದಿಂದ ರಕ್ಷಣೆ ಮಾಡಿಕೊಳ್ಳಬೇಕು ಎಂದರು.
ರೈತರಿಗೆ ಲಸಿಕಾ ಕಾರ್ಯಕ್ರಮದ ಕುರಿತು ಅರಿವು ಮೂಡಿಸುವುದರೊಂದಿಗೆ ಶೇಖಡಾವಾರು ಗುರಿ ಸಾಧನೆಗೆ ಕ್ರಮಕೈಗೊಳ್ಳಬೇಕು. ಕಾಲು ಬಾಯಿ ರೋಗವು ಎತ್ತು, ಹೋರಿ, ಹಸು ಎಮ್ಮೆ ಮತ್ತು ಹಂದಿಗಳಲ್ಲಿ ಬಂದು ಮಾಲಿಕರಿಗೆ ಆರ್ಥಿಕತೆ ನಷ್ಟ ಉಂಟುಮಾಡುವ ಮಾರಕ ರೋಗವಾಗಿದೆ. ರೋಗದಿಂದ ಗುಣಮುಖವಾದ ಜಾನುವಾರುಗಳಲ್ಲಿ ಗರ್ಭಕಟ್ಟುವಿಕೆಯಲ್ಲಿ ವಿಳಂಬ, ಸಾಮರ್ಥ್ಯ ನಷ್ಟ ಮತ್ತು ಹಾಲಿನ ಇಳುವರಿಯಲ್ಲಿ ಇಳಿಮುಖವಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ರೋಗದಿಂದ ಪೂರ್ಣ ಸುರಕ್ಷತೆಗಾಗಿ ಮೂರು ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವುದು ಅತ್ಯಗತ್ಯವಾಗಿದೆ.
ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ್ ಸುಂಕದ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.