ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ದುಪ್ಪಟ್ಟಾಗಿರುವುದರಿಂದ ರೈತರು ಬಿತ್ತನೆಗೆ ಪೂರ್ವವಾಗಿ ಕೃಷಿ ಚಟುವಟಿಕೆ ಕೈಗೊಂಡಿದ್ದಾರೆ.
ಈ ಬಾರಿ ಉತ್ತಮ ಮುಂಗಾರು ಮಳೆಯಾಗುವ ನಿರೀಕ್ಷೆ ಕೂಡ ಇದೆ. ಇದಕ್ಕೆ ತಕ್ಕಂತೆ ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೆ, ಕೇಂದ್ರ ಸರ್ಕಾರ ರಸಗೊಬ್ಬರದ ಸಬ್ಸಿಡಿಯನ್ನು ಹೆಚ್ಚಳ ಮಾಡಿದೆ. ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆ ಎದುರಾಗದಂತೆ ಕೃಷಿ ಇಲಾಖೆ ಕ್ರಮ ಕೈಗೊಂಡಿದ್ದು, ಭತ್ತ, ರಾಗಿ, ಮೆಕ್ಕೆಜೋಳ, ಸೂರ್ಯಕಾಂತಿ ಸೇರಿದಂತೆ 14 ಬಗೆಯ ಬಿತ್ತನೆ ಬೀಜಗಳನ್ನು ಸಬ್ಸಿಡಿ ದರದಲ್ಲಿ ರೈತರಿಗೆ ವಿತರಿಸಲು ಕ್ರಮಕೈಗೊಳ್ಳಲಾಗಿದೆ.
ಈ ಬಾರಿ ಮುಂಗಾರು ಹಂಗಾಮಿನಲ್ಲಿ 78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಅನೇಕ ಜಿಲ್ಲೆಗಳಲ್ಲಿ ಮುಂಗಾರುಪೂರ್ವ ಬಿತ್ತನೆ ಆರಂಭವಾಗಿದ್ದು, ಅಗತ್ಯವಿರುವ ಜಿಲ್ಲೆಗಳಿಗೆ ಬಿತ್ತನೆ ಬೀಜ, ಗೊಬ್ಬರ ಪೂರೈಕೆ ಮಾಡಲಾಗಿದೆ. ಮುಂಗಾರು ಪ್ರವೇಶಕ್ಕೆ ಕೆಲವೇ ದಿನಗಳು ಉಳಿದಿದ್ದು, ಮುಂಗಾರು ಪೂರ್ವ ಮಳೆ ಉತ್ತಮವಾಗಿರುವುದರಿಂದ ಆಹಾರಧಾನ್ಯ ಮತ್ತು ಎಣ್ಣೆಕಾಳುಗಳ ಉತ್ಪಾದನೆ ಗುರಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.