ಬೆಂಗಳೂರು: ಬಿತ್ತನೆ ಬೀಜ, ಗೊಬ್ಬರ ಕೊರತೆ ಆಗದಂತೆ ನಿಗಾ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಖುದ್ದಾಗಿ ನಿಗಾವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಕೃಷಿ ಇಲಾಖೆಯ ಆಯವ್ಯಯ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ, 7.64 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದ್ದು, ಬೇಡಿಕೆ ಪೂರೈಸಲು ಕೊರತೆಯಿಲ್ಲ. ವ್ಯವಸ್ಥಿತವಾಗಿ ರಸಗೊಬ್ಬರವನ್ನು ಸರ್ಕಾರದಲ್ಲಿ ಪೂರೈಸಬೇಕು ಎಂದು ತಿಳಿಸಿದ್ದಾರೆ.
ರೈತರಿಗಾಗಿ ಇರುವ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.