ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಅಣೆಕಟ್ಟುಗಳು ಭರ್ತಿಯಾಗಿವೆ. ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯ ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸಬೇಕು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಸೂಚನೆ ನೀಡಿದ್ದಾರೆ.
ಬುಧವಾರ ವಿಕಾಸಸೌಧದಲ್ಲಿ ಕೇಂದ್ರದ ಅನುದಾನ ಸಂಬಂಧ ಕೇಂದ್ರದ ಜಲ ಆಯೋಗ ಮತ್ತು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಈ ಕುರಿತಾಗಿ ಸೂಚನೆ ನೀಡಿದ್ದಾರೆ.
ರಾಜ್ಯದ ಬಹುತೇಕ ಕೆರೆಗಳಲ್ಲಿ ಅರ್ಧದಷ್ಟು ನೀರಿಲ್ಲ. ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೆಲವು ಕೆರೆಗಳಲ್ಲಿ ನೀರು ಸಂಗ್ರಹವಾಗಿಲ್ಲ. ಈ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸಬೇಕು ಎಂದು ಸೂಚನೆ ನೀಡಿದ್ದಾರೆ. ಅಗತ್ಯ ಕ್ರಿಯಾ ಯೋಜನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಿಷ್ಕ್ರಿಯಗೊಂಡಿರುವ ಏತ ನೀರಾವರಿ ಯೋಜನೆಗಳ ಬಗ್ಗೆ ವರದಿ ಸಲ್ಲಿಸಿ ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಇದಕ್ಕೆ ತಗಲುವ ವೆಚ್ಚದ ಕುರಿತಾಗಿ ಮಾಹಿತಿ ನೀಡಬೇಕು ಎಂದು ಸಚಿವರು ತಿಳಿಸಿದ್ದಾರೆ.