ಬೆಂಗಳೂರು: ಸರ್ಕಾರದಿಂದ ಜಾಗ ಸೇರಿ ಇನ್ನಿತರ ಅನುಕೂಲ ಪಡೆದುಕೊಂಡು ಕೈಗಾರಿಕೆಗಳನ್ನು ಸ್ಥಾಪನೆ ಮಾಡಿದವರು ಕಡ್ಡಾಯವಾಗಿ ಭೂಮಿ ನೀಡಿದ ರೈತರ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಕೋಲಾರ ಜಿಲ್ಲೆ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪನೆಯಾದ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿರುವ ಬಗ್ಗೆ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಪ್ರಸ್ತಾಪಿಸಿದ ವಿಷಯಕ್ಕೆ ಸಚಿವರು ಉತ್ತರ ನೀಡಿದ್ದಾರೆ.
ಸರ್ಕಾರದಿಂದ ಜಾಗ ಪಡೆದು ಉದ್ಯೋಗ ನೀಡದ ಸಂಸ್ಥೆಗಳಿಗೆ ಭಾರಿ ಪ್ರಮಾಣದ ದಂಡ ಮತ್ತು ಭೂಮಿ ವಾಪಸ್ ಪಡೆಯುವಂತಹ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೈಗಾರಿಕಾ ಪ್ರದೇಶಕ್ಕೆ ಭೂಮಿ ನೀಡಿದ ರೈತರ ಅಥವಾ ಭೂ ಮಾಲೀಕರ ಕುಟುಂಬದ ಸದಸ್ಯರೊಬ್ಬರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕಿದೆ. ಕೈಗಾರಿಕೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವಾಗಲೇ ಈ ಬಗ್ಗೆ ಷರತ್ತು ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.