ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿಮೆ ಹಾಗೂ ಕನಕ ಭವನವನ್ನು ಉದ್ಘಾಟಿಸಿದ್ದರು.
ಈ ಸಂದರ್ಭದಲ್ಲಿ ಕೆಲ ಗ್ರಾಮಸ್ಥರು, ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ್ದು, ಈಗ ಅವರುಗಳ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಳ್ಳಲಾಗಿದೆ.
ಸಿದ್ದರಾಮಯ್ಯನವರ ದೇವರಗುಡ್ಡ ಭೇಟಿ ವೇಳೆ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಸಲುವಾಗಿ ಕರ್ತವ್ಯದಲ್ಲಿದ್ದ ಪೇದೆ ಚನ್ನಬಸಪ್ಪ ಹಡಪದ ಎಂಬುವವರು ಭಾನುವಾರದಂದು ರಾಣೆಬೆನ್ನೂರು ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದು, ಅದರನ್ವಯ ಗ್ರಾಮಸ್ಥ ಕರಿಯಪ್ಪ ಕುದರಿಹಾಳ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.