ರಾಮನಗರ: ಇಂತಹ ನೂರು ಎಫ್ಐಆರ್ ದಾಖಲಾದರೂ ನಾನು ಧೃತಿಗೆಡುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಅಕ್ಕೂರು ಹೊಸಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ದೂರಿನ ಮೇರೆಗೆ ನನ್ನ ವಿರುದ್ಧ ಪೊಲೀಸರು ದಾಖಲಿಸಿದ ಎಫ್ಐಆರ್ ಹಾಸ್ಯಾಸ್ಪದ ಮತ್ತು ದುರುದ್ದೇಶಪೂರಿತವಾಗಿದೆ ಎಂದು ಟೀಕಿಸಿದ್ದಾರೆ.
ಉಪಚುನಾವಣೆ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ದ್ವೇಷ ಸಾಧನೆಗೆ ಕೋರ್ಟ್ ಮೂಲಕವೇ ಉತ್ತರ ಕೊಡುತ್ತೇನೆ. ಸುದ್ದಿಗೋಷ್ಠಿ ಮಾಡಿದ್ದಕ್ಕೆ ನನ್ನ ವಿರುದ್ಧ, ಪೂರಕವಾಗಿ ಹೇಳಿಕೆ ನೀಡಿದ್ದಕ್ಕೆ ನಿಖಿಲ್ ಕುಮಾರಸ್ವಾಮಿ ವಿರುದ್ಧ, ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ವಿರುದ್ಧ ಎಫ್ಐಆರ್ ಮಾಡಿಸಿದ್ದಾರೆ. ದುರುದ್ದೇಶ ಪೂರಕವಾಗಿ ಈ ರೀತಿ ಮಾಡಿದ್ದು, ಇಂತಹ ಪ್ರಕರಣಗಳಿಂದ ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಚನ್ನಪಟ್ಟಣದಲ್ಲಿ ಅವರ ಷಡ್ಯಂತ್ರ ನಡೆಯುವುದಿಲ್ಲ ಎಂದು ಗೊತ್ತಾಗಿ ಕುತಂತ್ರ ನಡೆಸಲು ಮುಂದಾಗಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.