ಬೆಂಗಳೂರು: ರಾಜ್ಯದಲ್ಲಿ 21 ಮೀಟರ್ ಗಿಂತಲೂ ಎತ್ತರದ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮ ಕೈಗೊಂಡ ಬಗ್ಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯವಾಗಿದೆ.
ಆರೋಗ್ಯ ಇಲಾಖೆಯಿಂದ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ. ದೆಹಲಿಯ ವಿವೇಕ್ ವಿಹಾರ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ ಅಗ್ನಿ ದುರಂತದಲ್ಲಿ ನವಜಾತ ಶಿಶುಗಳು ಮೃತಪಟ್ಟಿದ್ದರು. ಈ ಪ್ರಕರಣದ ಹಿನ್ನೆಲೆಯಲ್ಲಿ ಎಚ್ಚೆತ್ತ ರಾಜ್ಯ ಆರೋಗ್ಯ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.
ದೆಹಲಿ ಆಸ್ಪತ್ರೆಯಲ್ಲಿ ತುರ್ತು ನಿರ್ಗಮನ, ಅಗ್ನಿ ಸುರಕ್ಷತಾ ಕ್ರಮ ಕೈಗೊಳ್ಳದಿರುವುದು ಘಟನೆಗೆ ಕಾರಣವಾಗಿದೆ. ರಾಜ್ಯದಲ್ಲಿ 21 ಮೀಟರ್ ಗಿಂತ ಎತ್ತರದ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುವ ಪ್ರತಿ ಆಸ್ಪತ್ರೆಗಳು ಅಗ್ನಿ ಸುರಕ್ಷತಾ ಕ್ರಮ ಕೈಗೊಂಡ ಬಗ್ಗೆ ಅಗ್ನಿಶಾಮಕ ಇಲಾಖೆಯಿಂದ ಎನ್ಒಸಿ ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳಲಾಗಿದೆ.