ಬೆಂಗಳೂರು : ಮಲೆನಾಡಿಗರ ಬಹು ದಿನಗಳ ಕನಸು ನನಸಾಗಿದ್ದು, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಮೊದಲ ವಿಮಾನ ಇದೀಗ ಬಂದಿಳಿದಿದೆ.
ಹೌದು. ಶಿವಮೊಗ್ಗ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಇಂದಿನಿಂದ ಬೆಂಗಳೂರು- ಶಿವಮೊಗ್ಗ ನಡುವೆ ಲೋಹದ ಹಕ್ಕಿಗಳ ಹಾರಾಟ ಆರಂಭವಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೊದಲ ವಿಮಾನಕ್ಕೆ ವಾಟರ್ ಸೆಲ್ಯೂಟ್ ಮೂಲಕ ಭರ್ಜರಿ ಸ್ವಾಗತ ಕೋರಲಾಯಿತು. ಮೊದಲ ವಿಮಾನದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಎಂ.ಬಿ.ಪಾಟೀಲ್, ಶಾಸಕ ಅರಗ ಜ್ಞಾನೇಂದ್ರ, ಬೇಳೂರು ಗೋಪಾಲಕೃಷ್ಣ, ಹರತಾಳು ಹಾಲಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಸೇರಿ 72 ಮಂದಿ ಬಂದಿಳಿದರು.
ಬೆಳಗ್ಗೆ 9.50ಕ್ಕೆ ಹೊರಟ ಇಂಡಿಗೋ ಏರ್ ಲೈನ್ಸ್ ಗೆ ಸೇರಿದ ನಾಗರಿಕ ವಿಮಾನ ಬೆಳಗ್ಗೆ 10.45ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿತು. ಬೆಂಗಳೂರಿನಿಂದ ಶಿವಮೊಗ್ಗಕ್ಕೆ 55 ನಿಮಿಷದಲ್ಲಿ ಶಿವಮೊಗ್ಗಕ್ಕೆ ಲ್ಯಾಂಡ್ ಆಗಿದೆ.
ಶಿವಮೊಗ್ಗ ವಿಮಾನ ನಿಲ್ದಾಣವು 4,340 ಚದರ ಮೀಟರ್ ವಿಸ್ತೀರ್ಣದ ಪ್ರಯಾಣಿಕರ ಟರ್ಮಿನಲ್ ಮತ್ತು 3,050 ಮೀಟರ್ ಉದ್ದದ ರನ್ವೇಯನ್ನು ಇದು ಒಳಗೊಂಡಿದೆ. ಇದು ರಾಜ್ಯದ ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣವಾಗಿದ್ದು, ಇದಕ್ಕೆ 450 ಕೋಟಿ ರೂ. ವಿನಿಯೋಗಿಸಲಾಗಿದೆ. ಶಿವಮೊಗ್ಗದಿಂದ 15 ಕಿ.ಮೀ. ದೂರದಲ್ಲಿರುವ ಸೋಗಾನೆ ಎಂಬಲ್ಲಿ 779 ಎಕರೆ ಜಾಗದಲ್ಲಿ ಏರ್ಪೋರ್ಟ್ ಮೈದಾಳಿದ್ದು, ಇದರಲ್ಲಿ ಏರ್ಬಸ್ ಮಾದರಿಯ ವಿಮಾನಗಳೂ ಬಂದಿಳಿಯುವ ಅನುಕೂಲಗಳನ್ನು ಕಲ್ಪಿಸಲಾಗಿದೆ.